

8th May 2026

ಬಳ್ಳಾರಿ, ಮೇ.08: ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಬಳ್ಳಾರಿ ನಗರದಲ್ಲಿ ಜೂನ್ 1ರಿಂದ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದ್ದು, ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್ ತಿಳಿಸಿದ್ದಾರೆ.
ಭಾರತೀಯ ಮೋಟಾರು ವಾಹನ ಕಾಯ್ದೆ-1989 ಹಾಗೂ ಕರ್ನಾಟಕ ಮೋಟಾರ್ ವಾಹನ ನಿಯಮಗಳ ಪ್ರಕಾರ ದ್ವಿಚಕ್ರ ವಾಹನ ಚಾಲಕ ಮತ್ತು ಹಿಂಬದಿ ಸವಾರ ಇಬ್ಬರೂ ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದೆ. ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಮುಂದಾಗಿದೆ.
ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸುವುದು, ತ್ರಿಬಲ್ ರೈಡಿಂಗ್, ಮದ್ಯಪಾನ ಮಾಡಿ ವಾಹನ ಚಾಲನೆ, ವಾಹನ ಚಲಾಯಿಸುವ ವೇಳೆ ಮೊಬೈಲ್ ಬಳಕೆ ಸೇರಿದಂತೆ ಸಂಚಾರ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಎಚ್ಚರಿಸಿದ್ದಾರೆ.
ನಗರಾದ್ಯಂತ ಸಾರ್ವಜನಿಕರಲ್ಲಿ ಸಂಚಾರ ನಿಯಮಗಳ ಕುರಿತು ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಧ್ವನಿವರ್ಧಕಗಳ ಮೂಲಕ ಮಾಹಿತಿ ನೀಡುವುದು, ಕರಪತ್ರ ಹಂಚಿಕೆ, ಬೀದಿ ನಾಟಕ, ಬೈಕ್ ರ್ಯಾಲಿ ಹಾಗೂ ಜಾಗೃತಿ ವಾಹನಗಳ ಮೂಲಕ ಅರಿವು ಮೂಡಿಸುವ ಕಾರ್ಯ ನಡೆಯುತ್ತಿದೆ. ಕೆಲವು ದ್ವಿಚಕ್ರ ವಾಹನ ಸವಾರರಿಗೆ ಸಾಂಕೇತಿಕವಾಗಿ ಹೆಲ್ಮೆಟ್ಗಳನ್ನು ವಿತರಿಸಲಾಗುತ್ತಿದೆ.
ಶಾಲಾ-ಕಾಲೇಜು ವಿದ್ಯಾರ್ಥಿಗಳು, ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗೂ ಹೆಲ್ಮೆಟ್ ಕಡ್ಡಾಯವಾಗಿ ಧರಿಸುವಂತೆ ಸೂಚನೆ ನೀಡಲಾಗಿದೆ.
ಕಳೆದ ಮೂರು ವರ್ಷಗಳಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ 1009 ಅಪಘಾತ ಪ್ರಕರಣಗಳು ದಾಖಲಾಗಿದ್ದು, 462 ಮಂದಿ ಮೃತಪಟ್ಟಿದ್ದಾರೆ. 1072 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.
“ಜೀವ ಅಮೂಲ್ಯ. ದ್ವಿಚಕ್ರ ವಾಹನ ಸವಾರರು ತಮ್ಮ ಹಾಗೂ ಕುಟುಂಬದ ಸುರಕ್ಷತೆಗಾಗಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಬೇಕು” ಎಂದು ಎಸ್ಪಿ ಡಾ. ಸುಮನ್ ಡಿ. ಪೆನ್ನೇಕರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಎರಡು ವರ್ಷಗಳ ಬಳಿಕ ಮಹಿಳೆ, ಬಾಲಕ ಪತ್ತೆ ವಿಜಯವಾಡದಲ್ಲಿ ಪತ್ತೆ ಹಚ್ಚಿದ ಎಎಚ್ಟಿಯು ತಂಡ; ಕುಟುಂಬಕ್ಕೆ ಒಪ್ಪಣೆ