

11th June 2026

ಬಳ್ಳಾರಿ, ಜೂ. 11: ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಬೇಕೆಂದು ಯುವ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಟಿ. ಸೀನಪ್ಪ ಅವರು ಕಾಂಗ್ರೆಸ್ ಹೈಕಮಾಂಡ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ನಾಯಕರಿಗೆ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬಿ. ನಾಗೇಂದ್ರ ಅವರು ತಮ್ಮ ಸರಳತೆ, ಪ್ರಾಮಾಣಿಕತೆ ಹಾಗೂ ಜನಪರ ಕಾರ್ಯಗಳ ಮೂಲಕ ಜಿಲ್ಲೆಯ ಜನರ ವಿಶ್ವಾಸ ಗಳಿಸಿರುವ ನಾಯಕರಾಗಿದ್ದಾರೆ.
ಬಳ್ಳಾರಿ ಗ್ರಾಮೀಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಅವರು ಸಲ್ಲಿಸಿರುವ ಸೇವೆ ಅಪಾರವಾಗಿದ್ದು, ಸಚಿವರಾಗಿದ್ದ ಅವಧಿಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಮೂಲಕ ಪರಿಣಾಮಕಾರಿ ಆಡಳಿತ ನೀಡಿದ್ದರು ಎಂದು ಹೇಳಿದರು.
ಸುಳ್ಳು ಆರೋಪಗಳ ಹಿನ್ನೆಲೆ ಸಚಿವ ಸ್ಥಾನ ಕಳೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾದರೂ, ನಾಗೇಂದ್ರ ಅವರ ಜನಪರ ಕಾರ್ಯವೈಖರಿ ಮತ್ತು ನಾಯಕತ್ವದ ಬಗ್ಗೆ ಜನರಲ್ಲಿ ಇಂದಿಗೂ ಅಪಾರ ಗೌರವವಿದೆ.
ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಹಲವು ವೇದಿಕೆಗಳಲ್ಲಿ ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದರು ಎಂದು ಟಿ.ಸೀನಪ್ಪ ನೆನಪಿಸಿದರು.
ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮೊದಲ ಸಚಿವ ಸಂಪುಟ ಪಟ್ಟಿಯಲ್ಲಿ ಬಿ. ನಾಗೇಂದ್ರ ಅವರಿಗೆ ಸ್ಥಾನ ದೊರೆಯದಿರುವುದು ಜಿಲ್ಲೆಯ ಜನತೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರಲ್ಲಿ ನಿರಾಸೆ ಮೂಡಿಸಿದೆ.
ಜೂನ್ ಅಂತ್ಯದೊಳಗೆ ನಡೆಯಲಿರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ನ್ಯಾಯ ಒದಗಿಸಬೇಕು ಎಂದು ಅವರು ಆಗ್ರಹಿಸಿದರು.
ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿ, ಜನಪರ ಯೋಜನೆಗಳ ಅನುಷ್ಠಾನ ಹಾಗೂ ಪಂಚ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ನಾಗೇಂದ್ರ ಅವರು ಮಹತ್ವದ ಪಾತ್ರ ವಹಿಸಿದ್ದಾರೆ.
ಕಲೆ, ಸಾಹಿತ್ಯ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಪ್ರೋತ್ಸಾಹ ನೀಡುತ್ತಾ, ಪಕ್ಷಭೇದ ಮರೆತು ಎಲ್ಲ ವರ್ಗದ ಜನರೊಂದಿಗೆ ಬೆರೆತು ಕೆಲಸ ಮಾಡುತ್ತಿರುವ ಅವರು ಸಚಿವ ಸ್ಥಾನಕ್ಕೆ ಅರ್ಹರಾಗಿದ್ದಾರೆ ಎಂದು ಸೀನಪ್ಪ ಅಭಿಪ್ರಾಯಪಟ್ಟರು.
ಕಾಂಗ್ರೆಸ್ ಪಕ್ಷವು ಸಾಮಾಜಿಕ ನ್ಯಾಯದ ತತ್ವಗಳಿಗೆ ಬದ್ಧವಾಗಿದ್ದು, ಮುಂಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ಅವರನ್ನು ಪರಿಗಣಿಸಿ ಸಚಿವ ಸ್ಥಾನ ನೀಡಬೇಕು ಎಂದು ಟಿ. ಸೀನಪ್ಪ ಅವರು ಒತ್ತಾಯಿಸಿದ್ದಾರೆ.

ಗಾಲಿ ಲಕ್ಷ್ಮೀ ಅರುಣ ಜನ್ಮದಿನ: ಅನುಗ್ರಹ ಆಶ್ರಮದಲ್ಲಿ ಅನ್ನದಾನ, ಮಕ್ಕಳಿಗೆ ಸಿಹಿ ಹಂಚಿ ಸಂಭ್ರಮ