

4th July 2026

ಚಿಕ್ಕಜಾಜೂರು, ಜು. 4: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಎಸ್ಸಿ (CSC) ಸೇವಾ ಕೇಂದ್ರದ ವತಿಯಿಂದ ಆಯೋಜಿಸಿದ್ದ ಆನ್ಲೈನ್ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಚಿಕ್ಕಜಾಜೂರು ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಪ್ರಮಾಣಪತ್ರ ನೀಡಿ ಸನ್ಮಾನಿಸಲಾಯಿತು.
ತಾಲೂಕಿನ 652 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಿದ್ದು, ಶೇಕಡಾ 80ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಗೌರವ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶಾಲೆಯ ಮುಖ್ಯೋಪಾಧ್ಯಾಯ ತಿಪ್ಪೇಸ್ವಾಮಿ ಮಾತನಾಡಿ, ಒಲಿಂಪಿಯಾಡ್ ಪರೀಕ್ಷೆಯು 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯಾಗಿದ್ದು, ಗಣಿತ, ವಿಜ್ಞಾನ, ಇಂಗ್ಲಿಷ್ ಮತ್ತು ಸಾಮಾನ್ಯ ಜ್ಞಾನ ವಿಷಯಗಳಲ್ಲಿ ವಿದ್ಯಾರ್ಥಿಗಳ ಸಾಮರ್ಥ್ಯ ವೃದ್ಧಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಪರೀಕ್ಷೆಯು ಕೇವಲ ಶಾಲಾ ಪಠ್ಯಕ್ರಮಕ್ಕೆ ಸೀಮಿತವಾಗಿರದೆ, ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಆಳವಾದ ಜ್ಞಾನ, ವಿಶ್ಲೇಷಣಾತ್ಮಕ ಚಿಂತನೆ ಹಾಗೂ ಸಮಸ್ಯೆ ಪರಿಹಾರ ಕೌಶಲ್ಯಗಳನ್ನು ಬೆಳೆಸುವ ಉದ್ದೇಶ ಹೊಂದಿದೆ.
ಜಾಗತಿಕ ಮಟ್ಟದ ಸ್ಪರ್ಧೆಗಳಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವಲ್ಲಿ ಇಂತಹ ಪರೀಕ್ಷೆಗಳು ಮಹತ್ವದ ಪಾತ್ರವಹಿಸುತ್ತವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ರೈತ ಸಂಘದ ಅಧ್ಯಕ್ಷ ಉಮಾಪತಿ, ಶಿಕ್ಷಕಿ ಮಂಜುಳಾ ಬಾಯಿ, ಯೋಜನೆಯ ಮೇಲ್ವಿಚಾರಕಿ ಶಾರದ, ತಾಲೂಕು ನೋಡಲ್ ಅಧಿಕಾರಿ ಅಜಯ್, ಸೇವಾ ಪ್ರತಿನಿಧಿಗಳು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಾಲಬಾಧೆ ತಾಳಲಾರದೆ ಪತಿ, ಪತ್ನಿ, ಮಗ ನೇಣಿಗೆ ಶರಣು- ಸ್ಥಳಕ್ಕೆ-ಎಸ್.ಪಿ ರಾಮ್ ಅರಸಿದ್ದಿ ಭೇಟಿ

ಮುಂಗಾರು ಕ್ಷೀಣ-ಭದ್ರಾ ಜಲಾಶಯದಲ್ಲಿ ನೀರು ಖಾಲಿ- ಮುಂಗಾರು ಬೆಳೆಗೆ ನೀರು ಇಲ್ಲ: ರೈತರಿಗೆ ಆತಂಕ