ಮಂಡ್ಯ: ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಹಾಗೂ ಕರ್ನಾಟಕ ಸಂಘ ಮಂಡ್ಯ ಇವರ ಸಂಯುಕ್ತ ಆಶ್ರಯದಲ್ಲಿ ಜನವರಿ ೦೯ ರಿಂದ ೧೧ ರವರೆಗೆ ಮೂರು ದಿನಗಳ ಕಾಲ ಕೆ.ವಿ. ಶಂಕರಗೌಡ ನೆನಪಿನ ವಿಭಾಗೀಯ ಮಟ್ಟದ ನಾಟಕೋತ್ಸವ ನಗರದ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಸಂಘ ಅಧ್ಯಕ್ಷ ಪ್ರೊ.ಜಯಪ್ರಕಾಶ್ಗೌಡ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನವರಿ ೯ ರಂದು ಮಧ್ಯಾಹ್ನ ೩.೦೦ ಕ್ಕೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನಾಟಕೋತ್ಸವ ಉದ್ಘಾಟಿಸುವರು. ಶಾಸಕ ರವಿಕುಮಾರ್ ಗಣಿಗ ಅಧ್ಯಕ್ಷತೆ ವಹಿಸಲಿದ್ದು, ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಕೆ.ವಿ.ನಾಗರಾಜಮೂರ್ತಿ ಪ್ರಾಸ್ತಾವಿಕ ನುಡಿಗಳನ್ನಾಡುವರು. ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರು ವಿಭಾಗದ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನಸ್ವಾಮಿ ಹಾಗೂ ಕರ್ನಾಟಕ ಸಂಘದ ಅಧ್ಯಕ್ಷ ಜಯಪ್ರಕಾಶಗೌಡ ಭಾಗವಹಿಸುವರು ಎಂದು ಹೇಳಿದರು.
ಸಂಜೆ ೬:೦೦ ಗಂಟೆಗೆ ನಟರಾಜ್ ಹೊನ್ನವಳ್ಳಿ ಅವರ ರಂಗರೂಪ ಮತ್ತು ನಿರ್ದೇಶನದಲ್ಲಿ ಬೆಂಗಳೂರಿನ ಸಮುದಾಯ ರಂಗ ತಂಡ ಲೇಖಕ ಪೂರ್ಣಚಂದ್ರ ತೇಜಸ್ವಿಯವರ ಕಾದಂಬರಿ ಆಧಾರಿತ 'ಜುಗಾರಿ ಕ್ರಾಸ್' ನಾಟಕ ಪ್ರದರ್ಶನಗೊಳ್ಳಲಿದೆ ಎಂದರು.
ಜನವರಿ ೧೦ ರ ಶುಕ್ರವಾರ ಸಂಜೆ ೫ ಗಂಟೆಗೆ ಮುಖ್ಯ ಅತಿಥಿಗಳಾದ ಜನತಾ ಶಿಕ್ಷಣ ಟ್ರಸ್ಟ್ ನಿರ್ದೇಶಕ ಡಾ.ರಾಮಲಿಂಗಯ್ಯ, ಮಂಡ್ಯ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯ ಆಯುಕ್ತ ಜಿ.ಪಿ. ಭಕ್ತವತ್ಸಲ, ಆಯುಕ್ತ ಡಾ.ಹೆಚ್.ಅನಿಲ್ ಕುಮಾರ್ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಡಾ.ಜಾಹಿದಾ.ಎಂ.ಎ, ರಂಗ ಸಂಘಟಕ ಕುವೆಂಪು ಪ್ರಕಾಶ್ ಉಪಸ್ಥಿತಿಯಲ್ಲಿ, ಬಿ.ಎಂ.ಶಶಿಕಲಾ ರಂಗರೂಪ ಮತ್ತು ನಿರ್ದೇಶನದಲ್ಲಿ ಮೈಸೂರಿನ ಶಶಿ ಥಿಯೇಟರ್ನ ಕಲಾವಿದರು ಡಾ.ಎಚ್.ಎಸ್. ವೆಂಕಟೇಶಮೂರ್ತಿ ಅವರ `ಉರಿಯ ಉಯ್ಯಾಲೆ' ನಾಟಕ ಪ್ರಸ್ತುತಪಡಿಸುವರು ಎಂದು ತಿಳಿಸಿದರು.
ಜನವರಿ ೧೧ ರ ಮಧ್ಯಾಹ್ನ ೩:೦೦ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು ಪೋಲಿಸ್ ಮಹಾನಿರೀಕ್ಷಕ ಡಾ.ಬಿ.ಆರ್.ರವಿಕಾಂತೇಗೌಡ ಸಮಾರೋಪ ನುಡಿಗಳನ್ನಾಡಲಿದ್ದು, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಡಾ.ಧರಣಿದೇವಿ ಮಾಲಗತ್ತಿ ಭಾಗವಹಿಸಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಡ್ಯ ಜಿಲ್ಲೆಯ ಸಹಾಯಕ ನಿರ್ದೇಶಕ ಬಿ.ವಿ.ನಂದೀಶ್, ಜನತಾ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಕೆ.ಎಸ್.ವಿಜಯಾನಂದ ಉಪಸ್ಥಿತರಲಿದ್ದು, ಕಾಳೇನಹಳ್ಳಿಯ ಹಿರಿಯ ಕಲಾವಿದ ಟಿ.ಕೆಂಚೇಗೌಡ ಅವರಿಗೆ ಗೌರವ ಸಮರ್ಪಣೆ ಮಾಡಲಾಗುವುದು. ಸಂಜೆ ೪:೦೦ ಗಂಟೆಗೆ ಕಾರಸವಾಡಿ ಸುರೇಶ್ ಅವರ ಸಂಗೀತ ಮತ್ತು ನಿರ್ದೇಶನದಲ್ಲಿ `ಗದಾಯುದ್ಧ' ಪೌರಾಣಿಕ ನಾಟಕವನ್ನು ಮಾಂಡವ್ಯ ಕಲಾ ಟ್ರಸ್ಟ್ ಪ್ರಸ್ತುತಪಡಿಸಲಿದೆ ಎಂದು ವಿವರಿಸಿದರು.
ನಾಟಕ ಅಕಾಡೆಮಿ ಸದಸ್ಯ ಹಾಗೂ ನಾಟಕೋತ್ಸವದ ಸಂಚಾಲಕ ಜಿಪಿಒ ಎ.ಎಸ್.ಚಂದ್ರಶೇಖರ್ ಮಾತನಾಡಿ, ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ರಂಗಮಂದಿರದಲ್ಲಿ ಆಯೋಜಿಸಲಾಗಿರುವ ನಾಟಕಗಳಿಗೆ ಉಚಿತ ಪ್ರವೇಶವಿದ್ದು, ಕಲಾಪ್ರೇಮಿಗಳು, ಯುವಕರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಈ ವೇಳೆ ನಾಟಕೋತ್ಸವದ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಗೋಷ್ಠಿಯಲ್ಲಿ ಕರ್ನಾಟಕ ಸಂಘದ ಕಾರ್ಯದರ್ಶಿ ಸೋಮಶೇಖರ್ ಇದ್ದರು.







