ಕಾಸರಗೋಡು: ಕನ್ನಡ ಭವನ ಮತ್ತು ಗ್ರಂಥಾಲಯ, ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಉಚಿತ ವಾಚನಾಲಯ ಹಾಗೂ ಕಾಸರಗೋಡು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಾಂಸ್ಕೃತಿಕ ಘಟಕದ ಸಂಯುಕ್ತ ಆಶ್ರಯದಲ್ಲಿ ‘ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ-2026’ ನಡೆಯಲಿದೆ. ಇದರ ಅಂಗವಾಗಿ ಅಕ್ಟೋಬರ್ 18ರಂದು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ಕಾಸರಗೋಡು ದಸರಾ ಕವಿಗೋಷ್ಠಿ ನಡೆಯಲಿದೆ.
ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ಅವರ ಸಾರಥ್ಯದಲ್ಲಿ ಅಕ್ಟೋಬರ್ 11ರಿಂದ 21ರವರೆಗೆ ವಿವಿಧ ಸಾಹಿತ್ಯಿಕ, ಸಾಂಸ್ಕೃತಿಕ, ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. 2007ರಿಂದ ಕನ್ನಡ ಭವನವು ಕಾಸರಗೋಡು ಜಿಲ್ಲೆಯ ವಿವಿಧ ಭಾಗಗಳಲ್ಲಿ ದಸರಾ ಸಾಂಸ್ಕೃತಿಕೋತ್ಸವವನ್ನು ಆಯೋಜಿಸಿಕೊಂಡು ಬರುತ್ತಿದೆ.
ಈ ಬಾರಿಯ ಕಾಸರಗೋಡು ದಸರಾ ಕವಿಗೋಷ್ಠಿಯನ್ನು ಚುಟುಕು ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ಡಾ. ಎಂ.ಜಿ.ಆರ್. ಅರಸ್ ಉದ್ಘಾಟಿಸಲಿದ್ದಾರೆ. ಖ್ಯಾತ ಕವಿ, ಮೈಸೂರಿನ ಡಾ. ಜಯಪ್ಪ ಹೊನ್ನಾಳಿ (ಜಯ ಕವಿ ಮೈಸೂರು) ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಲಿದ್ದಾರೆ. ಮೈಸೂರು ದಸರಾ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಡಾ. ಜಯಪ್ಪ ಹೊನ್ನಾಳಿ ಅವರು ಕಾಸರಗೋಡು ದಸರಾ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸುತ್ತಿರುವುದು ಕವಿಗಳಲ್ಲಿ ವಿಶೇಷ ಉತ್ಸಾಹ ಮೂಡಿಸಿದೆ.
ಕವಿಗೋಷ್ಠಿಯಲ್ಲಿ ಅಂತರ್ರಾಜ್ಯ ಮಟ್ಟದಲ್ಲಿ ಆಯ್ಕೆಯಾದ 51 ಕವಿಗಳು ತಮ್ಮ ಕವನಗಳನ್ನು ವಾಚಿಸಲಿದ್ದಾರೆ. ಇದೇ ಸಂದರ್ಭದಲ್ಲಿ ‘ಕಾಸರಗೋಡು ದಸರಾ ಕವಿಶ್ರೇಷ್ಠ-2026’ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಪ್ರಶಸ್ತಿಗೆ 21 ಮಂದಿ ಶ್ರೇಷ್ಠ ಕವಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಕಾಸರಗೋಡು ದಸರಾ ಸಂಚಾಲಕ ಡಾ. ವಾಮನ್ ರಾವ್ ಬೇಕಲ್ ಹಾಗೂ ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಾಂಸ್ಕೃತಿಕ ಘಟಕದ ಅಧ್ಯಕ್ಷ ಪಾಂಗೋಡು ಪ್ರವೀಣ್ ನಾಯ್ಕ್ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

