ಬಳ್ಳಾರಿ,ಆ.19 :
ಸಂಡೂರು ತಾಲೂಕಿನ ತೋರಣಗಲ್ಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಅಲಕಾನಂದ ಡಿ. ಮಳಗಿ ಅವರು ಮಂಗಳವಾರ ಭೇಟಿ ನೀಡಿ, ಆಸ್ಪತ್ರೆಯ ವೈದ್ಯಕೀಯ ಸೇವೆಗಳು ಹಾಗೂ ಸಾರ್ವಜನಿಕರಿಗೆ ಸಿಗುತ್ತಿರುವ ಚಿಕಿತ್ಸಾ ಸೌಲಭ್ಯಗಳ ಪರಿಶೀಲನೆ ನಡೆಸಿದರು.
ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಅವರು, ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸಿಬ್ಬಂದಿಗೆ ಹಲವು ಪ್ರಮುಖ ನಿರ್ದೇಶನಗಳನ್ನು ನೀಡಿದರು.
ಎಲ್ಲ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ನಿಗದಿತ ಸಮಯಕ್ಕೆ ಸಮವಸ್ತç ಧರಿಸಿ ಕರ್ತವ್ಯಕ್ಕೆ ಹಾಜರಾಗಬೇಕು. ಆಸ್ಪತ್ರೆಗೆ ಬರುವ ರೋಗಿಗಳು ಮತ್ತು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ತಿಳಿಸಿದರು.
ತಾಯಿ-ಮಕ್ಕಳ ಆರೋಗ್ಯ ಕಾರ್ಯಕ್ರಮದಡಿ ಅಗತ್ಯ ಔಷಧಗಳು, ಲಸಿಕೆಗಳು ಹಾಗೂ ವಿಶೇಷವಾಗಿ ನಾಯಿ ಕಡಿತ ಮತ್ತು ಹಾವು ಕಡಿತಕ್ಕೆ ನೀಡುವ ಜೀವರಕ್ಷಕ ಔಷಧಗಳನ್ನು ಆಸ್ಪತ್ರೆಯಲ್ಲಿ ಸದಾ ದಾಸ್ತಾನು ಇರಿಸಿಕೊಳ್ಳಬೇಕು. ಕ್ಷಯರೋಗ, ಕುಷ್ಠರೋಗ, ಡೆಂಗ್ಯೂ, ಚಿಕೂನ್ಗುನ್ಯಾ, ಮೆದುಳು ಜ್ವರದಂತಹ ಸಾಂಕ್ರಾಮಿಕ ರೋಗಗಳು ಹಾಗೂ ಅಸಾಂಕ್ರಾಮಿಕ ರೋಗಗಳ ತಡೆಗೆ ಕ್ಷೇತ್ರ ಸಿಬ್ಬಂದಿ ಮೂಲಕ ನಿರಂತರ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.
ಮಳೆಗಾಲ ಹಿನ್ನೆಲೆಯಲ್ಲಿ ಮನೆ ಸುತ್ತಮುತ್ತ ನೀರು ನಿಲ್ಲದಂತೆ ಸ್ವಚ್ಛತೆ ಕಾಪಾಡಿಕೊಳ್ಳಲು ಹಾಗೂ ಸೊಳ್ಳೆಗಳ ಉತ್ಪತ್ತಿ ತಡೆಯಲು ಗ್ರಾಮ ಮಟ್ಟದಲ್ಲಿ ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.
ಇದೇ ವೇಳೆ ಹೆರಿಗೆ ಕೊಠಡಿಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಪ್ರತಿಯೊಂದು ನವಜಾತ ಮಗುವಿಗೆ ಸಮಯಕ್ಕೆ ಸರಿಯಾಗಿ ಲಸಿಕೆ ನೀಡಬೇಕು ಮತ್ತು ಬಾಣಂತಿಯರಿಗೆ ಕಬ್ಬಿಣಾಂಶ (ಐರನ್) ಹಾಗೂ ಕ್ಯಾಲ್ಸಿಯಂ ಮಾತ್ರೆಗಳನ್ನು ಕಡ್ಡಾಯವಾಗಿ ವಿತರಿಸಬೇಕು ಎಂದರು.
ಇದೇ ವೇಳೆ ಆಸ್ಪತ್ರೆಯ ವಿವಿಧ ವಾರ್ಡ್ಗಳು, ಔಷಧ ಕೊಠಡಿ, ಪ್ರಯೋಗಾಲಯ (ಲ್ಯಾಬ್) ಹಾಗೂ ಪ್ರಮುಖ ದಾಖಲೆಗಳನ್ನು ಪರಿಶೀಲಿಸಿದ ಅವರು, ಸಾರ್ವಜನಿಕರಿಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ತಾಲೂಕು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಸಂಡೂರು ತಾಲೂಕು ಆರೋಗ್ಯ ಅಧಿಕಾರಿ ಡಾ. ಹರೀಶ್, ಆಡಳಿತ ವೈದ್ಯಾಧಿಕಾರಿ ಡಾ. ಗೋಪಾಲರಾವ್, ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.







