ಬಳ್ಳಾರಿ, ಸೆ.2: ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಸರ್ಕಾರ ನಿಗದಿಪಡಿಸಿರುವ ವೇತನವನ್ನು ಕಡ್ಡಾಯವಾಗಿ ಪಾವತಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಲ್ಯಾಣ ಕರ್ನಾಟಕ ಕಾರ್ಮಿಕರ ಸಂಘ ಒತ್ತಾಯಿಸಿದೆ.
ಈ ಕುರಿತು ಮುಖ್ಯಮಂತ್ರಿ ಅವರಿಗೆ ಬರೆದ ಮನವಿ ಪತ್ರವನ್ನು ಸಂಘದ ಪದಾಧಿಕಾರಿಗಳು ಹೆಚ್ಚುವರಿ ಜಿಲ್ಲಾಧಿಕಾರಿ ಮಹ್ಮದ್ ಜುಬೇರ್ ಅವರಿಗೆ ಸಲ್ಲಿಸಿದರು.
ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಡಾಟಾ ಆಪರೇಟರ್ಗಳು, ಅಂಬುಲೆನ್ಸ್ ಚಾಲಕರು, ಅಡುಗೆಯವರು, ಅಟೆಂಡರ್ಗಳು, ರಾತ್ರಿ ಕಾವಲುಗಾರರು ಸೇರಿದಂತೆ ಸಾವಿರಾರು ಮಂದಿ ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿದ್ದಾರೆ.
ಆದರೆ, ಅವರಿಗೆ ಪ್ರಸ್ತುತ ನೀಡುತ್ತಿರುವ ವೇತನದಲ್ಲಿ ಮನೆ ಬಾಡಿಗೆ, ಮಕ್ಕಳ ಶಿಕ್ಷಣ ಹಾಗೂ ಕುಟುಂಬದ ದೈನಂದಿನ ಖರ್ಚು ನಿರ್ವಹಿಸುವುದು ಕಷ್ಟಕರವಾಗಿದೆ ಎಂದು ಸಂಘದ ಮುಖಂಡರು ಮನವಿಯಲ್ಲಿ ತಿಳಿಸಿದ್ದಾರೆ.
ಮೇ 22, 2026ರಂದು ಕಾರ್ಮಿಕ ಇಲಾಖೆ ಘೋಷಿಸಿರುವ ವೇತನವನ್ನು ಜಿಲ್ಲೆಯ ಎಲ್ಲ ಸರ್ಕಾರಿ ಇಲಾಖೆಗಳಲ್ಲಿನ ಹೊರಗುತ್ತಿಗೆ ನೌಕರರಿಗೆ ಜಾರಿಗೊಳಿಸಿ, ಅದರಂತೆ ವೇತನ ಪಾವತಿಸಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಕನಿಷ್ಠ ವೇತನ ನಿಗದಿಗೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಕೆ. ಪಾಟೀಲ್ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಉಪಸಮಿತಿಯು ಹೊಸ ಕನಿಷ್ಠ ವೇತನ ಕುರಿತ ವರದಿಯನ್ನು ಶೀಘ್ರ ಸಲ್ಲಿಸಬೇಕು. ಹೊರಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಿ, ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ನೌಕರರನ್ನು ನೇರ ನೇಮಕಾತಿ ವ್ಯವಸ್ಥೆಯಡಿ ಪರಿಗಣಿಸಬೇಕು ಎಂದು ಒತ್ತಾಯಿಸಲಾಗಿದೆ.
ಕಾರ್ಮಿಕರಿಗೆ ಉದ್ಯೋಗ ಭದ್ರತೆ ಕಲ್ಪಿಸುವ ಜತೆಗೆ ಪ್ರತಿ ತಿಂಗಳ 10ನೇ ತಾರೀಖಿನೊಳಗೆ ವೇತನ ಪಾವತಿಸುವ ವ್ಯವಸ್ಥೆ ಜಾರಿಗೊಳಿಸಬೇಕು.
ಜಿಲ್ಲೆಯ ಖಾಸಗಿ ಸಂಸ್ಥೆಗಳು, ಕಾಲೇಜುಗಳು ಹಾಗೂ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನವನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಸಂಘ ಆಗ್ರಹಿಸಿದೆ.
ಇನ್ನು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ವಿತರಿಸಲಾಗುತ್ತಿರುವ ಕಿಟ್ಗಳ ಟೆಂಡರ್ ಪದ್ಧತಿಯನ್ನು ರದ್ದುಪಡಿಸಿ, ಕಾರ್ಮಿಕರು ತಮಗೆ ಅಗತ್ಯವಿರುವ ಕಿಟ್ಗಳನ್ನು ಖರೀದಿಸಿಕೊಳ್ಳಲು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸಿಂಧೂರು ಲಕ್ಷ್ಮಣ, ಮುಖಂಡರಾದ ಮಲ್ಲಿಕಾರ್ಜುನ ಯಾಳ್ಪಿ, ಮುಕ್ಕಣ್ಣ, ಎ.ಕೆ. ಈರಪ್ಪ, ಗೋಪಾಲ, ದೇವರಾಜ್, ಬಸವರಾಜ್, ಹೆಚ್. ರಾಮು, ಜೆ.ವಿ. ಮಂಜುನಾಥ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.







