ಬಳ್ಳಾರಿ : ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯನಿಷ್ಠೆ, ಸಹಕಾರ ಮನೋಭಾವ ಹಾಗೂ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ನಿರಂತರ ಶ್ರಮಿಸುತ್ತಿರುವ ಬಳ್ಳಾರಿ ಜಿಲ್ಲೆಯ ಪಶ್ಚಿಮ ವಲಯದ ಕುರುಗೋಡು ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಹಾನಂದಿ ಕೊಟ್ಟಂ ಶಾಲೆಯ ಬಡ್ತಿ ಮುಖ್ಯಗುರುಗಳಾದ ಸಿದ್ದಲಿಂಗಮ್ಮ ಎಲ್. ಅವರಿಗೆ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಅನುಪಮ ಹಾಗೂ ಅನನ್ಯ ಸೇವೆಯನ್ನು ಗುರುತಿಸಿ ಜಿಲ್ಲಾ ಮಟ್ಟದ ‘ಗುರುರತ್ನ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ.
ಶಿಕ್ಷಣ ಇಲಾಖೆಯ ಶೈಕ್ಷಣಿಕ ಚಟುವಟಿಕೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುತ್ತಿರುವ ಸಿದ್ದಲಿಂಗಮ್ಮ ಅವರು, ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿದ್ದಾರೆ.
ಶಾಲೆಯ ಶೈಕ್ಷಣಿಕ ಪ್ರಗತಿಗೆ ತಮ್ಮನ್ನು ಸಮರ್ಪಿಸಿಕೊಂಡು ಕಾರ್ಯನಿರ್ವಹಿಸುತ್ತಿರುವ ಅವರ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಇತ್ತೀಚೆಗೆ ನಡೆದ ಅಭಿನಂದನಾ ಸಮಾರಂಭದಲ್ಲಿ ಸಿದ್ದಲಿಂಗಮ್ಮ.ಎಲ್ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಅವರ ಈ ಸಾಧನೆಗೆ ಶಿಕ್ಷಕ ವೃಂದ, ಶಿಕ್ಷಣ ಇಲಾಖೆ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡುವಂತಾಗಲಿ ಎಂದು ಶುಭ ಹಾರೈಸಿದರು.







